ಕಾಷ್ಠವ ಸುವರ್ಣವ ಮಾಡಿದೆನೆಂಬ,
ಘಾತುಕತನವೆ ನಿಮ್ಮ ಭಕ್ತಿ?
ಸಕಲ ದೇಶ ಕೋಶ ವಾಸ ಭಂಡಾರ,
ಸವಾಲಕ್ಷ ಮುಂತಾದ ಸಂಬಂಧ,
ಸ್ತ್ರೀಯರ ಬಿಟ್ಟು ಬಂದೆನೆಂಬ ಕೈಕೂಲಿಯೆ ನಿಮ್ಮ ಭಕ್ತಿ?
ಬಸವಣ್ಣ ಚೆನ್ನಬಸವಣ್ಣ ಪ್ರಭುದೇವರು ಮುಂತಾದ
ಏಳುನೂರೆಪ್ಪತ್ತು ಅಮರಗಣಂಗಳ ಭಾವವಿದ್ದಂತೆ
ನಿಮ್ಮ ಅಗಡವೇಕಯ್ಯಾ?
ನಿಮ್ಮ ಅರಿವಿಂಗೆ ಇದಿರಿನಲ್ಲಿ ಕೂಡಿಹೆನೆಂಬ
ಭಿನ್ನಭಾವವುಂಟೆ ಅಯ್ಯಾ?
ಕರ್ಪೂರದ ಅರಣ್ಯವ ಕಿಚ್ಚುಹತ್ತಿ ಬೆಂದಲ್ಲಿ
ಭಸ್ಮ ಇದ್ದಿಲೆಂದು ಲಕ್ಷಿಸಲುಂಟೆ?
ನಿಮ್ಮ ಭಾವವ ನಿಮ್ಮಲ್ಲಿಗೆ ತಿಳಿದುಕೊಳ್ಳಿ.
ನಿಮ್ಮ ಕೂಟಕ್ಕೆ ಎನ್ನ ನಾಚಿಕೆಯ ಬಿಡಿಸಿದ ತೆರನ ತಿಳಿದುಕೊಳ್ಳಿ.
ಶಕ್ತಿಯ ಮಾತೆಂದು ಧಿಕ್ಕರಿಸಬೇಡಿ.
ಹೊರಗೆ ಕೂಡಿಹೆನೆಂಬುದು ನಿಮ್ಮ ಅರಿವಿಂಗೆ ಹಾನಿ.
ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನಾ,
ನಿಮ್ಮ ಶರಣರ ನೆಲೆಯ ನೀವೇ ನೋಡಿಕೊಳ್ಳಿ.