Index   ವಚನ - 298    Search  
 
ಶಿವ ಶಿವ! ಪರಶಿವಮೂರ್ತಿ ಮಹಾಲಿಂಗವು ಕರುಣಿಸಿದ ಕರುಣದಿಂದ ನಾನಂಜೆ ಅಂಜೆನು. ವಾಙ್ಮನೋತೀತವು ಲಿಂಗವಾಗಿ ಅಂಗದ ಮೇಲೆ ನಿರಂತರವಾಗಿ ಸನ್ನಹಿತವಾಗಿ ಅಂಗಲಿಂಗ ಗುರುಲಿಂಗ ಏಕವಾಗಿ ಪ್ರಾಣಲಿಂಗವಾದನಾಗಿ ಪ್ರಾಣಲಿಂಗ. ಜಿಹ್ವೆಯಲ್ಲಿ ಮಂತ್ರಮಯ ಗುರುಲಿಂಗವಾಗಿ ಬಿಜಯಂಗೈದನಾಗಿ ಜಿಹ್ವೆಲಿಂಗ. ಕಂಗಳಲ್ಲಿ ಶಿವಲಿಂಗಮೂರ್ತಿಯಂ ತುಂಬಿದನಾಗಿ ಕಂಗಳು ಲಿಂಗ. ತ್ವಕ್ಕಿನಲ್ಲಿ ಜಂಗಮಲಿಂಗಮೂರ್ತಿಯಂ ತುಂಬಿದನಾಗಿ ತ್ವಕ್ಕು ಲಿಂಗ. ಕಿವಿಗಳಲ್ಲಿ ಲಿಂಗಮಹಾತ್ಮೆಯ ಶ್ರುತಿ ಪುರಾಣ ಪುರಾತರ ವಚನಂಗಳ ತುಂಬಿದನಾಗಿ ಶ್ರೋತ್ರ ಲಿಂಗವು. ಶಿವನ ಶ್ರೀಪಾದಕಮಲಪ್ರಸಾದವ ವಾಸಿಸುವಂತೆ ಮಾಡಿದನಾಗಿ ಘ್ರಾಣಲಿಂಗವು. ಲಿಂಗವ ನಿರಂತರ ಸ್ಪರ್ಶವ ಮಾಡುವಂತೆ ಮಾಡಿದನಾಗಿ ಹಸ್ತ ಲಿಂಗವಾದವು. ಲಿಂಗವನೆ ಭಾವಿಸುವಂತೆ ಮಾಡಿದನಾಗಿ ಭಾವ ಲಿಂಗವು. ಮನದಲ್ಲಿ ನೆನಹು ಭರಿತವಾಗಿ ಮನ ಲಿಂಗವು. ಸುವಿಚಾರ ಸಂಪೂರ್ಣವ ಗ್ರಹಿಸಿತ್ತಾಗಿ ಬುದ್ಧಿ ಲಿಂಗವು. ನಿಶ್ಚಯಪದವ ಹಿಡಿಯಿತ್ತಾಗಿ ಅಹಂಕಾರ ಲಿಂಗವು. ನಿರಂತರ ಮರೆಯದಂತೆ ಮಾಡಿದನಾಗಿ ಚಿತ್ತ ಲಿಂಗವು. ಇಂತು ಅಂತರಂಗ ಬಹಿರಂಗ ಲಿಂಗ, ಸರ್ವಾಂಗಲಿಂಗವ ಮಾಡಿ, ಸದ್ಗುರುಲಿಂಗವಾಗಿ ಜಂಗಮಲಿಂಗವಾಗಿ ಪ್ರಾಣಲಿಂಗವಾಗಿ ಪ್ರಸಾದಲಿಂಗವಾಗಿ ಪ್ರಸಾದವನಿಕ್ಕಿ ಸಲಹಿದನು. ಈ ಮಹಾಘನಪರಿಣಾಮವ ಶಿವ! ಶಿವ ನೀನೇ ಬಲ್ಲೆ ಶಿವ ಶಿವ! ಮಹಾದೇವ, ಶಿವ ಶಿವ! ಮಹಾದೇವ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ ನೀನೇ ಬಲ್ಲೆ.