ವಚನ - 377     
 
ಜಗದಗಲದಲ್ಲಿ ಹಬ್ಬಿದ ಬಲೆ, ಯುಗಜುಗಕ್ಕೆ ತೆಗೆಯದು ನೋಡಾ! [ಅದು] ಬಗೆಯಲ್ಲಿ ಭ್ರಮೆಗೊಳ್ಳದು, ತನ್ನ ಇರವಿನ ಪರಿ ಇಂತುಟಾಗಿ! ಜಗದ ಪ್ರಾಣಿಗಳುಲಿದುಲಿದು ಮರಳಿ ಮತ್ತಲ್ಲಿಯೆ ಬೀಳಲು, ಬಲೆಯ ನೇಣು ಬಗ್ಗುರಿಯ ಕೈಯಲಿರಲು, ಬಲೆಯ ನೇಣ ಕಣ್ಣಿ ಕಳಚಿ, ಲಿಂಗಕ್ಕೆ ಪ್ರಾಣ ಶರಣೆನ್ನುತ್ತವೆ ನಿಂದು, ಒಡಲುಪಾಧಿಯನರಿಯದೆ ಬೆಳಗಿನಲ್ಲಿ ನಿಂದು, ಬೇಡಿದವರಿಗೆ ಅಣಿಮಾದಿ ಗುಣಂಗಳನಿತ್ತು, ಮನೋಮಧ್ಯದಲ್ಲಿ ನಿಲಿಸಿ ನೆನೆವುತ್ತಿರ್ದು ಸುಖಿಯಾದ; ಪ್ರಾಣನಾಥನ ಕಾಯ ಶೂನ್ಯಲಿಂಗಕ್ಕೆ, ಪ್ರಾಣಶೂನ್ಯಶರಣ. ಗುಹೇಶ್ವರಲಿಂಗವ ಬೆರಸಿ ಬೇರಿಲ್ಲ.