Index   ವಚನ - 10    Search  
 
ಆತ್ಮನು ಘಟದಲ್ಲಿಪ್ಪ ಸೂತ್ರವ ಯೋಗಿಗಳು ಭೇದಿಸಿ ಕಂಡು ಧ್ಯಾನ ಧಾರಣ ಸಮಾಧಿಯಿಂದ ಆತ್ಮನ ಕಟ್ಟುವಡೆದೆನೆಂದು ನುಡಿದ ದಿಟ್ಟರ ನೋಡಾ. ಆತ್ಮ ಕಟ್ಟುವಡೆದ ಮತ್ತೆ ನಿಧಾನಿಸುವುದೇನು ಧಾರಣದಲ್ಲಿ? ಎಡೆ ತಾಕುವದೇನು ಸಮಾಧಿಯಲ್ಲಿ? ಸಮಾಧಾನದಿಂದ ಸಮಾಧಿಯಲ್ಲಿಪ್ಪುದೇನು ಎಂಬುದ ತಾನರಿತಲ್ಲಿ ಯೋನಿಯ ಯೋಗವೆನಲೇತಕ್ಕೆ? ಈಡಾ ಪಿಂಗಳವೆಂಬ ಎರಡು ದಾರಿಯಲ್ಲಿ ಸುಷುಮ್ನಾನಾಳಕ್ಕೆ ಏರಿದ ಮತ್ತೆ ಆತ್ಮನು ಮತ್ತೆ ಮತ್ತೆ ನಾಡಿನಾಡಿಗಳಲ್ಲಿ ದ್ವಾರದ್ವಾರಂಗಳಲ್ಲಿ ಭೇದಿಸಿ ವೇದಿಸಲೇತಕ್ಕೆ? ಬೀಜದ ತಿರುಳು ಸತ್ತ ಮತ್ತೆ ಎಯ್ದೆ ನೀರಹೊಯ್ದಡೆ ಸಾಗಿಸಿ ಬೆಳೆದುದುಂಟೆ? ಆತ್ಮಯೋಗಿಯಾದಲ್ಲಿ ನೇತ್ರ ಶ್ರೋತ್ರ ಘ್ರಾಣ ತ್ವಕ್ಕು ಜಿಹ್ವೆ ಎಂದಿನ ನಿಹಿತದಂತೆ ಆಡಬಹುದೆ? ಅದು ಯೋಗವಲ್ಲ, ಇವ ಕಲಿತೆಹೆನೆಂಬ ಬಲು ರೋಗವಲ್ಲದೆ, ಇದು ಮೀಸಲುಗವಿತೆ, ಇದು ಘಾತಕರುಗಳಿಗೆ ಅಸಾಧ್ಯ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು.