Index   ವಚನ - 1    Search  
 
ಆಚಾರಲಿಂಗ ಗುರುಲಿಂಗ ಶಿವಲಿಂಗ ಜಂಗಮಲಿಂಗ ಪ್ರಸಾದಲಿಂಗ ಮಹಾಲಿಂಗ ಮುಂತಾಗಿರ್ದ ದೃಷ್ಟ ಅರ್ಪಿತಂಗಳ ಅರ್ಪಿಸುವಲ್ಲಿ ಗಂಧದಿಂದ ಸುಳಿವ ನಾನಾ ಸುಗಂಧವ ರಸದಿಂದ ಬಂದ ನಾನಾ ರಸಂಗಳ ರೂಪಿನಲ್ಲಿ ಕಾಣಿಸಿಕೊಂಬ ನಾನಾ ಚಿತ್ರ ವಿಚಿತ್ರ ಖಂಡಿತ ಅಖಂಡಿತಮಪ್ಪ ದೃಷ್ಟಾಂತಂಗಳಲ್ಲಿ ಸ್ಪರ್ಶನದಲ್ಲಿ ಮೃದುಕಠಿಣದೊಳಗಾದ ಮುಟ್ಟುತಟ್ಟಿನ ಭೇದವ ಲಕ್ಷಿಸುವಲ್ಲಿ ಶಬ್ದದಿಂದ ಸಪ್ತಸ್ವರದೊಳಗಾದ ನಾನಾ ಘೋಷ ವಾಸನಂಗಳ ಅಳಿದುಳಿದು ತೋರುವ ಸುನಾದ ಸಂಚುಗಳಲ್ಲಿ -ಇಂತೀ ಪಂಚೇಂದ್ರಿಯಂಗಳಲ್ಲಿ ಪ್ರಸಾದ ಮುಂತಾಗಿ ಅರ್ಪಿಸಿಕೊಂಡೆಹೆವೆಂಬಲ್ಲಿ ಗುರುಪ್ರಸಾದಿಗೆ ಲಿಂಗಪ್ರಸಾದವಿಲ್ಲ. ಲಿಂಗಪ್ರಸಾದಿಗೆ ಜಂಗಮಪ್ರಸಾದವಿಲ್ಲ. ಜಂಗಮಪ್ರಸಾದಿಗೆ ಮಹಾಪ್ರಸಾದವಿಲ್ಲ. ಮಹಾಪ್ರಸಾದಿಗೆ ಪರಿಪೂರ್ಣ ಪ್ರಸಾದವಿಲ್ಲ. ಪರಿಪೂರ್ಣಪ್ರಸಾದಿಗೆ ಪಂಚೇಂದ್ರಿಯದೊಳಗಾದ ಮುಟ್ಟಿನ ಪ್ರಸಾದ, ಕಟ್ಟಿನ ಸೂತಕವಿಲ್ಲ. ಅದೆಂತೆಂದಡೆ: ಕರ್ಪೂರದ ಚಿತ್ರಸಾಲೆಯ ಕಿಚ್ಚು ಮುಟ್ಟಿದ ಮತ್ತೆ ಚಿತ್ರವಲ್ಲಿಯೆ ನಿರ್ಲಕ್ಷ್ಯವಾದಂತೆ ಪತ್ರಂಗಳಲ್ಲಿ ನಾನಾ ಅಕ್ಷರಂಗಳ ಲಕ್ಷಿಸಿ ಬರೆದು ಅವು ಕಿಚ್ಚು ಮುಟ್ಟಿ ಸುಟ್ಟಲ್ಲಿ ಎತ್ತಿ ಪ್ರತಿಯ ಲಕ್ಷಿಸಬಹುದೆ? ಇಂತೀ ಅರಿದರುಹಿನಲ್ಲಿ ಎಡೆದೆರಪಿಲ್ಲದ ಪ್ರಸಾದಿಗೆ ಆ ಗುಣ ಪ್ರಸನ್ನಪ್ರಸಾದಿಯ ಇರವು ದಹನ ಚಂಡಿಕೇಶ್ವರಲಿಂಗದಿರವು.