Index   ವಚನ - 30    Search  
 
ಸರ್ವಕಳಾ ಚಿತ್ರ ವಿಚಿತ್ರವೆಂಬ ಮೋಹನ ಚಿಚ್ಫಕ್ತಿಯು ವೇದೋಪನಿಷತ್ತು ಶಾಸ್ತ್ರ ಆಗಮ ಪುರಾಣ ಶಬ್ದ ಜ್ಯೋತಿಷ ವ್ಯಾಕರಣ ಯೋಗಾಭ್ಯಾಸ ವೀಣಾಭರಣ ಛಂದಸ್ಸು ನಾಟಕಾಲಂಕಾರ ಇಂತೀ ಪರೀಕ್ಷೆಯು ನೋಡುವ ಅಯ್ಯಗಳ ಎಲ್ಲ ತನ್ನ ಜವನಿಕೆಯೊಳಗೆ ಕೆಡಹಿಕೊಂಡಿತ್ತು. ಧ್ಯಾನ ಮೌನದಿಂದ ಕಂಡೆಹೆನೆಂಬವರ ಅಜ್ಞಾನಕೆ ಒಡಲುಮಾಡಿತ್ತು. ತತ್ವದವ ನೋಡೆಹೆನೆಂಬವರ ಮೆಚ್ಚಿಸಿ ಮರುಳುಮಾಡಿತ್ತು. ಅಂಗವೆಲ್ಲವನರಿದೆನೆಂಬವರ ಹಿಂಗದೆ ತನ್ನ ಅಂಗದ ಬಲೆಯೊಳಗೆ ಕೆಡಹಿತ್ತು. ಲಿಂಗಮೋಹಿಗಳೆಂಬವರ ತನ್ನ ಸಂಗದ ಅನಂಗನ ಅಂತರಂಗಕ್ಕೆ ಒಳಗುಮಾಡಿತ್ತು. ವೇದವೇದ್ಯವೆಂಬರೆಲ್ಲರನು ಏಕಾಂತದೊಳಗೆ ತಳಹೊಳಗೊಳಿಸಿತ್ತು. ಕಣ್ಣ ಮುಚ್ಚಿ ಜಪ ಧ್ಯಾನ ಶೀಲ ಮೌನ ನೇಮ ನಿತ್ಯವ ಹಿಡಿವ ವ್ರತಿಗಳ ನಾನಾ ಭವದಲ್ಲಿ ಬರಿಸಿತ್ತು. ವಾಗದ್ವೈತವ ನುಡಿವ ಅರುಹಿರಿಯರೆಂಬವರ ಜಾಗ್ರದಲ್ಲಿ ಆಕ್ರಮಿಸಿಕೊಂಡಿತ್ತು. ಸ್ವಪ್ನದಲ್ಲಿ ಮೂರ್ಛಿತರ ಮಾಡಿತ್ತು. ಸುಷುಪ್ತಿಯಲ್ಲಿ ಕಂಡೆನೆಂಬವರ ವ್ಯಾಪ್ತಿಯೆಂಬ ಬೇಳುವೆಗೊಳಗುಮಾಡಿತ್ತು. ಇಂತೀ ತ್ರಿವಿಧದೊಳ ಹೊರಗಿನ ಭೇದವನರಿಯದ ಪ್ರಪಂಚುದೇಹಿಗಳಿಗೆ ವಿರಕ್ತಿ ಇನ್ನೆಲ್ಲಿಯದು ? ಘಟಿಸದು ಕಾ[ಣಾ]. ಬಸವಪ್ರಿಯ ವಿಶ್ವಕರ್ಮಟಕ್ಕೆ ಕಾಳಿಕಾವಿಮಲ ರಾಜೇಶ್ವರಲಿಂಗವು ನಿರ್ಧರವಾದಲ್ಲಿ ನಿವಾಸವಾಗಿಪ್ಪನು.