Index   ವಚನ - 57    Search  
 
ಧರೆಯ ಮೇಲೆ ನಿಂದು ಹೊಡೆವಡಿಸಿಕೊಂಬ ದೈವದ ಕುರುಹು ಎಲ್ಲಿ ಇದ್ದಿತ್ತು ಹೇಳಿರಣ್ಣಾ? ಶರೀರದ ಮೇಲೆ ಕಟ್ಟಿ, ಕರ ಚರಣಾದಿ ಅವಯವಂಗಳು ಮುಂತಾದ ಹಲವು ಪರಿಭ್ರಮಣದಿಂದ ಪೂಜಿಸಿಕೊಂಬುದು, ಅದಾವ ಲಿಂಗವಣ್ಣಾ ? ಸರ್ವರೆಲ್ಲರ ಕೈಯಲ್ಲಿ, ಇದು ವಸ್ತು ಅಲ್ಲ, ಅಹುದೆಂದು ಗೆಲ್ಲ ಸೋಲಕ್ಕೆ ಹೋರುವುದು, ಅದಾವ ವಸ್ತುವಿನ ಕುರುಹಣ್ಣಾ ? ಇಂತೀ ಸ್ಥಾವರ ಚರ ಅರಿವಿನ ಕುರುಹೆಂಬುದೊಂದು ಸೆರಗ ತೋರಾ ? ಅದು ನುಡಿವಡೆ ಸಮಯಕ್ಕೆ ದೂರ. ಅದು ಮುನ್ನವೆ ಅರಿದರಿವ ಈಗ ಕುರುಹಿಡುವಲ್ಲಿ, ಅದು ಪರಿಭ್ರಮಣ ಭ್ರಾಂತಿ. ಇಂತೀ ಕರ್ಮಕಾಂಡ, ಇಂತಿವನರಿದು ಬೆರೆದೆನೆಂಬ ಜ್ಞಾನಕಾಂಡ. ಸುಮುದ್ರಿತವಾಗಿ, ಆ ಸುಮುದ್ರೆಯಲ್ಲಿ ಸೂತಕ ನಿಂದು, ಅದೇತಕ್ಕೂ ಒಡಲಿಲ್ಲದಿಪ್ಪುದು, ಕಾಮಧೂಮ ಧೂಳೇಶ್ವರ ತಾನು ತಾನೆ.