Index   ವಚನ - 177    Search  
 
ಒಂದು ದ್ವಾರದಲ್ಲಿ ಬಂದ ಆತ್ಮಂಗೆ, ಹಲವು ದ್ವಾರದಲ್ಲಿ ಉಂಟೆಂದು, ಹೊಲಬುದಪ್ಪಿ ನುಡಿದವರ ನೋಡಾ. ವಾಯು ಒಂದಲ್ಲದೆ ಶತವಾಯುವಿಲ್ಲೆಂದೆ, ಇಂದ್ರಿಯ ಒಂದಲ್ಲದೆ ಐದಿಲ್ಲವೆಂದೆ. ಕರಣ ಒಂದಲ್ಲದೆ ನಾಲ್ಕಿಲ್ಲವೆಂದೆ, ಮದ ಒಂದಲ್ಲದೆ ಎಂಟಿಲ್ಲವೆಂದು. ವ್ಯಸನ ಒಂದಲ್ಲದೆ ಏಳಿಲ್ಲವೆಂದೆ, ಆಧಾರ ಒಂದಲ್ಲದೆ ಷಡಾಧಾರವಿಲ್ಲವೆಂದೆ. ಒಂದು ಬೀಜದಲ್ಲಿ ಆದ ಹಣ್ಣಿನ ರುಚಿಗೆ, ನಾನಾ ಫಲದ ರಸದ ರುಚಿ ಉಂಟೆ ? ಆ ಬೀಜ ಮೊಳೆತಲ್ಲಿ ಏಕರೂಪವಾಗಿ ತಲೆದೋರಿತ್ತು. ಬಲಿದು ಮತ್ತೆ ಹಲವುರೂಪಾಗಿ ಪಲ್ಲವಿಸಿತ್ತು. ನೆಲೆಯ ಕಡಿದ ಮತ್ತೆ ರೂಪೆಲ್ಲ ನೆಲೆಯೊಳಡಗಿದವು. ಸೆಲೆಸಂದ ಹೊನ್ನಿಂಗೆ ಒಟ್ಟವುಂಟೆ ? ಬಲುಹು ಮುರಿದವಂಗೆ ರಣದ ಸುದ್ದಿಯೇಕೋ ? ಜಲದಲ್ಲಿ ಮುಳುಗಿದವಂಗೆ ಇಳೆಯವರ ಸುದ್ದೀಯೇಕೋ ? ಇದು ಕಾರಣ, ನಾನಾ ವರ್ಣದ ಹೇಮವ ಭಾವಿಸಿ, ಒಂದರಲ್ಲಿ ಕಡೆಗಾಣಿಸಿದ ಮತ್ತೆ ಭಾವನೆಯ ಬಣ್ಣ ಒಂದಲ್ಲದೆ ಮತ್ತೆ ಭಾವಿಸಲಿಲ್ಲವಾಗಿ, ಅರಿದಲ್ಲಿ ಜ್ಞಾನ, ಮರೆದಲ್ಲಿ ಅಜ್ಞಾನ, ನಾನಾರೆಂಬುದನರಿದಲ್ಲಿಯೆ ಒಂದು ಗುಣ ನಿಂದಿತ್ತು. ತನ್ನ ಮರೆದಲ್ಲಿಯೆ ನಾನಾ ಸಂಚಲವಾಯಿತ್ತು, ಇದಕ್ಕಿದೇ ದೃಷ್ಟ. ದೇಹವಿಡಿದುದಕ್ಕೆರಡಿಲ್ಲದೆ ಮೀರಲಿಲ್ಲವಾಗಿ, ಜಗವನರಿವುದಕ್ಕೆ ದಿವರಾತ್ರಿಯದೆ ಮೀರಿ ತೋರಲಿಲ್ಲವಾಗಿ, ಸಂಸಾರ ಹರಿವುದಕ್ಕೆ ನಿಃಕಳಂಕ ಮಲ್ಲಿಕಾರ್ಜುನನಲ್ಲದಿಲ್ಲವಾಗಿ.