Index   ವಚನ - 253    Search  
 
ಆರು ಇಲ್ಲದ ಅರಣ್ಯದಲ್ಲೊಂದು ಬೀಜವಿಲ್ಲದ ವೃಕ್ಷ ಪುಟ್ಟಿತ್ತು. ಆ ವೃಕ್ಷಕ್ಕೆ ಹೂವಿಲ್ಲದೆ ಕಾಯಿಯಾಯಿತ್ತು; ಕಾಯಿಯಿಲ್ಲದೆ ಹಣ್ಣಾಗಿತ್ತು. ಗಾಳಿಯಿಲ್ಲದೆ ಗಂಧವ ತೋರಿತ್ತು. ಆ ವಾಸನಕ್ಕೆ ಪಕ್ಕವಿದಲ್ಲದ ಹಕ್ಕಿ ಹಾರಿಹೋಗಿ ಹಣ್ಣನೆ ಕಚ್ಚಿತ್ತು. ಆ ಹಣ್ಣಿನ ರಸ ಭೂಮಿಯಮೇಲೆ ಸುರಿಯಲು ಭೂಮಿ ಬೆಂದು, ಸಮುದ್ರ ಬತ್ತಿ, ಅರಸನ ಮಾರ್ಬಲವೆಲ್ಲ ಪ್ರಳಯವಾಗಿ, ಅರಸು ಪ್ರಧಾನಿ ಸತ್ತು ಅರಸಿ ಅರಮನೆಯಲ್ಲಿ ಬಯಲಾಗಿ, ಎತ್ತ ಹೋದರೆಂದರಿಯಬಲ್ಲರೆ ಗುಹೇಶ್ವರಲಿಂಗವು ತಾನೆಯೆಂದನಯ್ಯ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.