Index   ವಚನ - 317    Search  
 
ಭವಬಂಧನಂಗಳ ಹಿಂಗಿಸಬೇಕೆಂಬಣ್ಣಗಳು ನೀವು ಬಲ್ಲರೆ ಹೇಳಿರಿ, ಅರಿಯದಿದ್ದರೆ ಕೇಳಿರಿ. ಶ್ರೀಗುರುಪುತ್ರನಾಗಿ ಅವರು ತಮ್ಮ ಅಂತಃಕರಣ ಕೃಪೆಯಿಂದ ಪೇಳಿದ ಪ್ರಸಾದವಾಕ್ಯವನು ಅವರ ದಯದಿಂದ ಪೇಳುತಿರ್ದೆನು ಕೇಳಿರಯ್ಯ. ಅದೆಂತೆಂದಡೆ : ಆಶೆ ಆಮಿಷ ತಾಮಸದೊಡನೆ ಕೂಡಿ ಕ್ಲೇಶಪಡುತಿರ್ದಂತೆ ಗುರುಗಳಲ್ಲಿ ಅಥವಾ ಜಂಗಮಲಿಂಗಿಗಳಲ್ಲಿ ಇಂತೀ ಉಭಯ ಪಾಶಬದ್ಧರ ಕೈಯಿಂದ ಅಹಂಕಾರ ಮಮಕಾರದಲ್ಲಿ ಆಣವಮಲ, ಮಾಯಾಮಲ, ಕಾರ್ಮಿಕಮಲವೆಂಬ ಮಲತ್ರಯಂಗಳ ಕಚ್ಚಿ, ಸಂಸಾರವಿಷಯದಲ್ಲಿ ಲಂಪಟರಾದ ಭಕ್ತಜನಂಗಳು ಅಥವಾ ಶಿಷ್ಯೋತ್ತಮನಾದಂಥವರು ಇಂತಪ್ಪವರು ಲಿಂಗವ ಪಡೆದು, ಉಪದೇಶವ ಹಡದು, ಆಚರಿಸುವರ ಆಚರಣೆಯೆಂತಾಯಿತ್ತೆಂದಡೆ, ತಲೆಯಿಲ್ಲದ ಪುರುಷನ ಸಂಗ, ಕಣ್ಣಿಲ್ಲದ ಸ್ತ್ರೀ ಸಂಯೋಗವ ಮಾಡಿ, ಜೀವವಿಲ್ಲದೊಂದು ಮಗನ ಹಡದಂತಾಯಿತ್ತಯ್ಯ. ಅಂತಪ್ಪ ದೇವ ಭಕ್ತ ಗುರು ಶಿಷ್ಯರೆಂಬ ಈ ಚತುರ್ವಿಧ ಪುರುಷರಿಗೆ ಭವ ಹಿಂಗದು, ಮುಕ್ತಿ ಎಂದಿಗೂ ತೋರದು. ಅದೇನು ಕಾರಣವೆಂದಡೆ : ತಾವ್ಯಾರು, ತಮ್ಮ ಸ್ವರೂಪವಾವುದು ಎಂಬ ನಿಲುಕಡೆಯ ತಿಳಿಯದ ಕಾರಣ. ಮತ್ತಂ ಪೇಳ್ವೆ : ತಮ್ಮ ನಿಜವ ತಾವರಿದು, ಸರ್ವಾಚಾರಸಂಪತ್ತು ಅಳವಟ್ಟು, ಸರ್ವಾಂಗಲಿಂಗಮಯವಾಗಿರುವಂಥ ನಿಃಕಲ ಸದ್ರೂಪಸ್ವರೂಪರಾದ ಆಚಾರ್ಯಂಗಳಲ್ಲಾಗಲಿ, ಅಥವಾ ಸತ್ತುಚಿತ್ತಾನಂದ ನಿತ್ಯಪರಿಪೂರ್ಣಭರಿತನಾದ ನಿಃಕಲಪರಮಾನಂದಸ್ವರೂಪರಾದ ನಿರಂಜನಜಂಗಮದಲ್ಲಾಗಲಿ ಇಂತೀ ಉಭಯ ಪರಮೂರ್ತಿಗಳ ಕರುಣಕೃಪೆಯಿಂದ ಶಿವಜ್ಞಾನೋದಯವಾಗಿ ಸಕಲಪ್ರಪಂಚವನೆಲ್ಲವ ನಿವೃತ್ತಿಯ ಮಾಡಿ ಲಿಂಗಾಂಗಸಮರಸದನುಭವವಳವಟ್ಟು ತ್ರಿವಿಧ ವಂಚನೆಯಿಲ್ಲದೆ ಕ್ಷಮೆ, ದಮೆ, ಶಾಂತಿ, ಸೈರಣೆ ಗುಣವುಳ್ಳಂಥ ಸದ್ಭಕ್ತ ಶರಣಜನಂಗಳಲ್ಲಾಗಲಿ ಅಥವಾ ಶಿಷ್ಯೋತ್ತಮನಾದಂಥವರುಗಳಲ್ಲಾಗಲಿ ಇಂತೀ ಉಭಯ ಭಕ್ತಗಣಂಗಳು ಚಿದ್ಘನಮಹಾಲಿಂಗವೆಂಬ ಇಷ್ಟಲಿಂಗವ ಕರಸ್ಥಲಕ್ಕೆ ಪಡಕೊಂಡು, ತಾರಕಮಂತ್ರವೆಂಬ ಮಂತ್ರೋಪದೇಶವ ಹಡಕೊಂಡು, ಆಚರಿಸುವ ಸದ್ಭಕ್ತ ಶರಣಜನಂಗಳ ಆಚರಣೆಯೆಂತಾಯಿತ್ತಯ್ಯಯೆಂದಡೆ: ಸೂರ್ಯಪ್ರಕಾಶವನುಳ್ಳಂಥ ಕನ್ಯಕುಮಾರ ರಾಜನಸಂಗ ಚಂದ್ರಕಾಂತಿಪ್ರಕಾಶವನುಳ್ಳಂಥ ಕನ್ಯಸ್ತ್ರೀಯಳು ಸಂಯೋಗವ ಮಾಡಿ ಅಗ್ನಿಕಾಂತಿಪ್ರಕಾಶವನುಳ್ಳಂಥ ಪುತ್ರನ ಹಡೆದಂತಾಯಿತ್ತಯ್ಯ. ಇಂತಪ್ಪ ಆಚಾರವನುಳ್ಳ ಗುರು ಶಿಷ್ಯರು ದೇವ ಭಕ್ತರೆಂಬ ಈ ನಾಲ್ಕು ಪರಪುರುಷರಿಗೆ ಭವಹಿಂಗುವುದು. ಮುಕ್ತಿಯೆಂಬುದು ಕರತಳಾಮಳಕವಾಗಿ ತೋರುವುದು. ಮತ್ತಂ, ಲಿಂಗಾಂಗಸಂಬಂಧಿಯಾಗಿ ಸರ್ವಾಚಾರ ನೆಲೆಗೊಂಡು ಸರ್ವಾಗಲಿಂಗಿಯಾದಂಥ ವೀರಮಾಹೇಶ್ವರರಾಗಲಿ, ಅಥವಾ ಗುರುಗಳಾಗಲಿ, ಸದ್ಭಕ್ತ ಶರಣಜನಂಗಳಾಗಲಿ, ಇಂತಪ್ಪ ತ್ರಿವಿಧಶಿವಜ್ಞಾನಿಗಳ ಚರಣಕಮಲಕ್ಕೆ ದೀರ್ಘದಂಡನಮಸ್ಕಾರಮಂ ಮಾಡಿ ಸುಜ್ಞಾನೋದಯವಾಗಿ ಮೋಕ್ಷವ ಹಡೆಯಬೇಕೆಂಬ ಜ್ಞಾನಕಲಾತ್ಮರಾದಂಥವರು ಲಿಂಗಾಂಗಸಮರಸದನುಭಾವವ ವಿಚಾರಿಸಿಕೊಳ್ಳಬೇಕು. ಅಂತಪ್ಪ ಪರಶಿವಮೂರ್ತಿಗಳಾದ ಗುರುಗಳಲ್ಲಾಗಲಿ, ಅಥವಾ ಜಂಗಮಲಿಂಗಿಗಳಲ್ಲಾಗಲಿ, ಅಥವಾ ಇಂತಹ ಶಿವಜ್ಞಾನಿಗಳಾದ ಭಕ್ತರಲ್ಲಾಗಲಿ, ಶಿಷ್ಯೋತ್ತಮರಲ್ಲಾಗಲಿ, ಇಂತಪ್ಪವರಿಗೆ ಲಿಂಗಾಂಗಸಮರಸವ ತೋರಬೇಕು, ತೋರದಿದ್ದರೆ ಪ್ರಮಥರು ಮೆಚ್ಚರು. ಇಂತಪ್ಪ ತ್ರಿಮೂರ್ತಿಗಳು ಹೇಳಿದ ಹಾಂಗೆ ಕೇಳಿ ವಿಶ್ವಾಸದಿಂದ ಆಚರಿಸದಿದ್ದರೆ ಭವಹಿಂಗದು ಮುಕ್ತಿಯೆಂಬುದು ಎಂದೆಂದಿಗೂ ತೋರದು ಎಂದನಯ್ಯಾ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.