Index   ವಚನ - 7    Search  
 
ಈರೇಳು ಲೋಕವನೊಳಕೊಂಡ ಮಹಾಘನಲಿಂಗವು ಭಕ್ತನ ಕರಸ್ಥಲಕ್ಕೆ ಬಂದು ಪೂಜೆಗೊಂಬ ಪರಿಯ ನೋಡಾ. ಅಗಮ್ಯ ಅಗೋಚರ ಅಪ್ರಮಾಣ ಲಿಂಗಸಂಗದಲ್ಲಿ ಇರಬಲ್ಲಾತನೇ ಭಕ್ತನು. ಹೀಗಲ್ಲದೆ ಕೇಡಿಲ್ಲದೆ ಲಿಂಗಕ್ಕೆ ಕೇಡ ಕಟ್ಟಿ ಹೋದೀತೋ ಇದ್ದೀತೋ ಅಳಿದೀತೋ ಹೇಗೋ ಎಂತೋ ಎಂದು ಚಿಂತಿಸಿ ನುಡಿವರು ಭಿನ್ನವಿಜ್ಞಾನಿಗಳು. ಆ ಲಿಂಗದೊಳಗೆ ಅಖಿಳಾಂಡಕೋಟಿ ಬ್ರಹ್ಮಾಂಡಗಳಡಗಿದವು. ಸಾಕ್ಷಿ : "ಲಿಂಗಮಧ್ಯೇ ಜಗತ್ಸರ್ವಂ ತ್ರೈಲೋಕ್ಯಂ ಸಚರಾಚರಂ | ಲಿಂಗಬಾಹ್ಯಾತ್ ಪರಂ ನಾಸ್ತಿ ತಸ್ಮಾಲ್ಲಿಂಗಂ ಪ್ರಪೂಜಯೇತ್ ||" ಎಂದುದಾಗಿ, ಇಂತಪ್ಪ ಘನಲಿಂಗವ ಶ್ರೀಗುರು ಭಕ್ತಂಗೆ ಕರ-ಮನ-ಭಾವಕ್ಕೆ ಪ್ರತ್ಯಕ್ಷವಾಗಿ ಮಾಡಿಕೊಟ್ಟ ಬಳಿಕ ಎಂದಿಗೂ ಅಗಲಬೇಡಿಯೆಂದು ಗಣಸಾಕ್ಷಿಯಾಗಿ ಮಾಡಿಕೊಟ್ಟ ಬಳಿಕ ಅಗಲಲುಂಟೆ? ಅಗಲಿದಡೆ ಲಿಂಗವು ಗುರುತಲ್ಪಕವೆ ಸರಿ. ಆವ ಶಾಸ್ತ್ರ ಆವ ಆಗಮ ಆವ ವಚನ ಹೇಳಿಲ್ಲವಾಗಿ, ಮತ್ತಂ, ಸಂಪಿಗೆಯ ಪುಷ್ಪದ ಪರಿಮಳ ಬೇರೆ ಆಗಲುಂಟೆ? ಇಂತಪ್ಪ ಮಹಾಘನಲಿಂಗವು ಹೇಗಿಪ್ಪುದೆಂದಡೆ : ಅವರವರ ಮನ ಭಾವ ಹೇಗಿಪ್ಪುದೊ ಹಾಗಿಪ್ಪುದು. ಇದಕ್ಕೆ ದೃಷ್ಟಾಂತ : ಉದಕ ಒಂದೇ, ಹಲವು ವೃಕ್ಷದ ಹಣ್ಣು ಮಧುರ ಒಗರು ಖಾರ ಹುಳಿ ಕಹಿ ಸವಿ. ಉದಕ ಒಂದೇ, ಶ್ವೇತ ಪೀತ ಹರಿತ ಮಾಂಜಿಷ್ಟ ಕಪೋತ ಮಾಣಿಕ್ಯ. ಈ ಆರು ವರ್ಣಂಗಳಲ್ಲಿ ಬೆರೆದುದು ಅಭ್ರಕ ಒಂದೇ! ಈ ಅಭ್ರಕ ಹೇಗೊ ಹಾಗೆ ಮನ, ಹಾಗೆ ಮಹಾಲಿಂಗ. ಹೀಗೆಂದರಿದಾತ ನಮ್ಮ ಶಾಂತಕೂಡಲಸಂಗಮದೇವ ಬಲ್ಲನಲ್ಲದೆ ಭಿನ್ನಜ್ಞಾನಿಗಳು ಎತ್ತ ಬಲ್ಲರು ನೋಡಾ!