Index   ವಚನ - 98    Search  
 
ಅಯ್ಯ, ಇಂತು ಕಲ್ಯಾಣಪಟ್ಟಣದ ಅನುಭಾವಮಂಟಪದ ಶೂನ್ಯಸಿಂಹಾಸನದಲ್ಲಿ ಪ್ರಭುಸ್ವಾಮಿಗಳು ಬಸವರಾಜೇಂದ್ರ ಮುಖ್ಯವಾದ ಸಕಲಪ್ರಮಥಗಣಂಗಳು ಕೂಡಿ, ಚಿಕ್ಕದಂಡನಾಯಕ ಮುಖವಚನದಿಂದೆ ಶಿವಯೋಗಿ ಸಿದ್ಧರಾಮೇಶ್ವರನ ಉಪದೇಶಕಾರಣಾರ್ಥವಾಗಿ, ನವರತ್ನ ಖಚಿತ ಮಂಟಪವ ರಚಿಸಿ, ಶುಚಿ, ರುಚಿ, ಪರುಷ, ನಿಜ, ಸದ್ಭಕ್ತಿ, ಜ್ಞಾನ, ವೈರಾಗ್ಯ, ಸತ್ಕ್ರಿಯಾಚಾರ ಷಟ್ಸ್ಥಲಮಾರ್ಗವ ಚೆನ್ನಬಸವಣ್ಣನ ಮುಖವಚನದಿಂದೆ ಸಿದ್ಧರಾಮದೇಶಿಕೇಂದ್ರನಿಗೆ ಬೋಧಿಸಿದ ನಿಲುಕಡೆಯ ಸೂತ್ರವದೆಂತೆಂದಡೆ: ಅಯ್ಯ, ಮೂವತ್ತಾರು ತತ್ವಂಗಳಲ್ಲಿ ಸಂಬಂಧವಾದ ಅಷ್ಟಾವರಣಂಗಳ ಕೂಡಿ ನಾಲ್ವತ್ತುನಾಲ್ಕು ಚಿದಂಗತತ್ವಂಗಳೆಂದೆನಿಸಿ, ಅಯ್ಯ, ಇಷ್ಟಲಿಂಗಜಪಪ್ರದಕ್ಷಿಣ ಪ್ರಣಮ ಹತ್ತೊಂಬತ್ತು, ಪ್ರಾಣಲಿಂಗಜಪಪ್ರದಕ್ಷಿಣ ಪ್ರಣಮ ಹತ್ತೊಂಬತ್ತು, ಭಾವಲಿಂಗಜಪಪ್ರದಕ್ಷಿಣ ಪ್ರಣಮ ಹತ್ತೊಂಬತ್ತು ಕೂಡಲಾಗಿ ಐವತ್ತೇಳು ಮಹಾಪ್ರಣಮಂಗಳೆ ಚಿದ್ಛನಲಿಂಗಸ್ಥಲಂಗಳಾಗಿ ಶೋಭಿಸುವಂಥ ಚಿದಂಗ-ಚಿದ್ಘನಲಿಂಗವ ಉಭಯಭಾವವಳಿದು ನೂರೊಂದುಸ್ಥಲವ ಸಂಬಂಧವಮಾಡಿ, ಮಾರ್ಗಾಚರಣೆಯ ಕುರುಹ ತೋರಿ, ಅಂತರಂಗದಲ್ಲಿ ಶೋಭಿಸುವ ಲೋಮವಿಲೋಮದಳಂಗಳೆ ನೂರೆಂಟು ತೆರದ ಚಿದಂಗಂಗಳಾಗಿ, ಆ ದಳಂಗಳಲ್ಲಿ ಝಗಝಗಾಯಮಾನವಾಗಿ ಪ್ರಕಾಶಿಸುವ ಪ್ರಣಮಂಗಳೆ ನೂರೆಂಟು ತೆರದ ಚಿದ್ಘನಲಿಂಗಂಗಳಾಗಿ, ಒಳಗು-ಹೊರಗು ಎಂಬ ಉಭಯ ನಾಮ ರೂಪು ಕ್ರಿಯವನಳಿದು ಇನ್ನೂರ ಹದಿನಾರು ಸ್ಥಲವ ಸಂಬಂಧವ ಮಾಡಿ ಮೀರಿದ ಕ್ರಿಯಾಚರಣೆಯ ಕುರುಹ ತೋರಿ ಅನಾದಿಗುರು ಬಸವರಾಜೇಂದ್ರನ ಪ್ರಸಿದ್ಧಪ್ರಸಾದವೆ ಮಾರ್ಗಕ್ರಿಯಾರೂಪವಾದ ನೂರೊಂದು ಸ್ಥಲಂಗಳಾಗಿ, ಅನಾದಿಜಂಗಮ ಪ್ರಭುರಾಜೇಂದ್ರನ ಶುದ್ಧಪ್ರಸಾದವೆ ಮೀರಿದ ಕ್ರಿಯಾರೂಪವಾದ ಇನ್ನೂರ ಹದಿನಾರುಸ್ಥಲಂಗಳಾಗಿ, ಇವರಿಬ್ಬರ ಮಹಾಪ್ರಸಾದವೆ ಘಟ್ಟಿಗೊಂಡು ಅನಾದಿಶರಣರೂಪವ ತಾಳಿ ಚೆನ್ನಬಸವಣ್ಣನೆಂಬಭಿಧಾನದಿಂದ ಮಾರ್ಗಕ್ರಿಯಾಸ್ವರೂಪ ನೂರೊಂದುಸ್ಥಲವೆ ಆಚರಣೆಯಾಗಿ ಮೀರಿದ ಕ್ರಿಯಾಸ್ವರೂಪ ಇನ್ನೂರ ಹದಿನಾರುಸ್ಥಲವೆ ಸಂಬಂಧವಾಗಿ ಅನಾದಿಪರಶಿವರೂಪ ಶಿವಯೋಗಿಸಿದ್ಧರಾಮನ ಕರ-ಮನ-ಭಾವಂಗಳಲ್ಲಿ ಮಿಶ್ರಾಮಿಶ್ರಂಗಳೊಡನೆ ಅಗಣಿತ ಸೂರ್ಯಚಂದ್ರಾಗ್ನಿ ಪ್ರಕಾಶಕ್ಕೆ ಮಿಗಿಲಾಗಿ ತ್ಯಾಗ-ಭೋಗ-ಯೋಗಾನುಸಂಧಾನದಿಂದ ಸಿದ್ಧರಾಮನ ಕರಸ್ಥಲದಲ್ಲಿ 'ಶುದ್ಧಪ್ರಸಾದ'-ಇಷ್ಟಲಿಂಗವಾಗಿ ಅಷ್ಟವಿಧಾರ್ಚನೆ-ಷೋಡಶೋಪಚಾರವ ಕೈಕೊಂಡು ಒಪ್ಪುತ್ತಿರ್ಪರು ನೋಡ. ಮನಸ್ಥಲದಲ್ಲಿ 'ಸಿದ್ಧಪ್ರಸಾದ'-ಪ್ರಾಣಲಿಂಗವಾಗಿ ಮಂತ್ರ-ಧ್ಯಾನ-ಜಪ-ಸ್ತೋತ್ರಂಗಳ ಕೈಕೊಂಡು ಒಪ್ಪುತ್ತಿರ್ಪರು ನೋಡ. ಭಾವಸ್ಥಲದಲ್ಲಿ 'ಪ್ರಸಿದ್ಧಪ್ರಸಾದ'-ಭಾವಲಿಂಗವಾಗಿ ಮನೋರ್ಲಯ ನಿರಂಜನ ಪೂಜಾಕ್ರಿಯಾನಂದ ಕೂಟವ ಕೈಕೊಂಡು ಒಪ್ಪುತ್ತಿರ್ಪರು ನೋಡ. ಇಂತು ಸಂಬಂಧಾಚರಣೆಯ ಸ್ಥಲಕುಳಂಗಳ ಚಿದ್ಬೆಳಗಿನಲ್ಲಿ ಶೋಭಿಸುವ ಬಸವಣ್ಣ, ಚೆನ್ನಬಸವಣ್ಣ, ಪ್ರಭು, ಸಿದ್ಧರಾಮ ಪ್ರಮಥಗಣಂಗಳ ಮಹಾಪ್ರಸಾದ ಬೆಳಗಿಗೆ ಯೋಗ್ಯರಾಗಿ ದಗ್ಧಪಟನ್ಯಾಯ, ಉರಿವುಂಡ ಕರ್ಪೂರದಂತಾದೆವು ನೋಡ ಸಂಗನಬಸವೇಶ್ವರ.