Index   ವಚನ - 88    Search  
 
ಅಗ್ನಿಗಿರಿಯ ಪಟ್ಟಣದ ಚಂದ್ರಗಿರಿಯ ಪಟ್ಟಣದ ನಡುವೆ ಎರಡೆಸಳ ಸ್ಥಾವರ ಗದ್ದುಗೆಯ ಕಂಡೆನಯ್ಯ. ಆ ಗದ್ದುಗೆಯ ಮೇಲೆ ಸ್ಫಟಿಕವರ್ಣದ ಮೂರ್ತಿ ನೆಲೆಯಂಗೊಂಡಿರ್ಪನು ನೋಡಾ. ಆ ಸ್ಫಟಿಕವರ್ಣದಮೂರ್ತಿಯ ಕೂಡಿ ಅಗ್ನಿಗಿರಿಯ ಪಟ್ಟಣಮಂ ಹೊಗಲು, ಅಲ್ಲಿ ಆಚಾರಲಿಂಗದೇವರು, ಗುರುಲಿಂಗದೇವರು, ಶಿವಲಿಂಗದೇವರು ನೆಲೆಯಂಗೊಂಡಿರ್ಪರು ನೋಡಾ. ಅವರಿಗೆ ಸೂಚನೆಯ ಮುಟ್ಟಿಸಲು ಆಚಾರಲಿಂಗದೇವರು ನಾಶಿಕಾಗ್ರದಲ್ಲಿ ನೆಲೆಯಂಗೊಂಡರು. ಗುರುಲಿಂಗದೇವರು ಜಿಹ್ವಾಗ್ರದಲ್ಲಿ ನೆಲೆಯಂಗೊಂಡರು. ಶಿವಲಿಂಗದೇವರು ನೇತ್ರಸ್ವಯದಲ್ಲಿ ನೆಲೆಯಂಗೊಂಡರು. ಆ ಸ್ಫಟಿಕವರ್ಣದ ಮೂರ್ತಿಯಂ ಕೂಡಿ ಚಂದ್ರಗಿರಿಯ ಪಟ್ಟಣಮಂ ಪೊಗಲು ಅಲ್ಲಿ ಜಂಗಮಲಿಂಗದೇವರು, ಪ್ರಸಾದಲಿಂಗದೇವರು, ಮಹಾಲಿಂಗದೇವರು ನೆಲೆಯಂಗೊಂಡಿರ್ಪರು ನೋಡಾ. ಅವರಿಂಗೆ ಸೂಚನೆಯಂ ಮುಟ್ಟಿಸಲು, ಜಂಗಮಲಿಂಗದೇವರು ತ್ವಕ್ಕಿನ ಸ್ವಯದಲ್ಲಿ ನೆಲೆಯಂಗೊಂಡಿರ್ಪರು. ಪ್ರಸಾದಲಿಂಗದೇವರು ಶ್ರೋತ್ರಸ್ವಯದಲ್ಲಿ ನೆಲೆಯಂಗೊಂಡಿರ್ಪರು. ಮಹಾಲಿಂಗದೇವರು ಭಾವಸ್ವಯದಲ್ಲಿ ನೆಲೆಯಂಗೊಂಡಿರ್ಪರು. ಆ ಸ್ಫಟಿಕವರ್ಣದ ಮೂರ್ತಿಯಂ ಕೂಡಿ, ಅಗ್ನಿಗಿರಿಯಪಟ್ಟಣ ಚಂದ್ರಗಿರಿಯ ಪಟ್ಟಣದ ಮುಂದಳ ದಿಕ್ಕಿನಲ್ಲಿ ಸಾವಿರೆಸಳಮಂಟಪ ಕಂಡೆನಯ್ಯ. ಆ ಮಂಟಪದೊಳಗೆ ಮಹಾಜ್ಞಾನಪ್ರಕಾಶವು ಹೊಳೆವುತಿರ್ಪುದು ನೋಡಾ. ಆ ಬೆಳಗಿನೊಳು ಕೂಡಿ ತಾನುತಾನಾಗಿರ್ಪನಯ್ಯ ಝೇಂಕಾರ ನಿಜಲಿಂಗಪ್ರಭುವೆ ನಿಮ್ಮ ಶರಣನು.